ಈರುಳ್ಳಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಖರೀದಿಗೆ ರಾಜ್ಯ ಸರ್ಕಾರ ಚಿಂತನೆ

0
370

ಬೆಂಗಳೂರು ಪ್ರತಿನಿಧಿ ವರದಿ
ಈರುಳ್ಳಿ ಬೆಲೆಯಲ್ಲಿ ತೀವ್ರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಈರುಳ್ಳಿ ಖರೀದಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಅವರು ತಿಳಿಸಿದರು.
 
 
ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈ ಬಾರಿ ಈರುಳ್ಳಿಯ ಬಂಪರ್ ಬೆಳೆಯಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ದರದಲ್ಲಿ ತೀವ್ರ ಕುಸಿತ ಉಂಟಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರು ಕಂಗಾಲಾಗಿದ್ದಾರೆ. ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಖರೀದಿ ಕೇಂದ್ರ ಸ್ಥಾಪಿಸಲು ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಸಂಪುಟ ಉಪ ಸಮಿತಿಯು ಶೀಘ್ರವೇ ತೀರ್ಮಾನಿಸಲಿದೆ.
 
 
ಈರುಳ್ಳಿ ಬೆಲೆ ಕುಸಿತದ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ರಾಜ್ಯ ಮತ್ತು ಕೇಂದ್ರ ಸರ್ಕಾರ ಶೇಕಡಾ 50 ಮತ್ತು 50 ರ ಅನುಪಾತದಲ್ಲಿ ಕೇಂದ್ರದ ಮಾರ್ಗಸೂಚಿಯಂತೆ ಈರುಳ್ಳಿ ಖರೀದಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಪ್ರತಿ ಕೆ ಜಿ ಈರುಳ್ಳಿಗೆ ಹನ್ನೊಂದು ರೂ ನಂತೆ ಖರೀದಿಸಲು ಅನುಮತಿ ನೀಡುವಂತೆ ರಾಜ್ಯದ ಅಧಿಕಾರಿಗಳು ಇದೀಗ ದೆಹಲಿಯಲ್ಲಿ ಸಮಾಲೋಚನೆ ನಡೆಸುತ್ತಿದ್ದಾರೆ.
 
 
ಧಾರವಾಡ, ಗದಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಚಿಕ್ಕಮಗಳೂರು ಒಳಗೊಂಡಂತೆ ಕೆಲವು ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಈರುಳ್ಳಿ ಬೆಳೆಯ ಇಳುವರಿಯಾಗಿದೆ. ಒಂದು ಅಂದಾಜಿನಂತೆ ರಾಜ್ಯದಲ್ಲಿ 3.5 ಲಕ್ಷ ಎಕರೆ ಪ್ರದೇಶದಲ್ಲಿ ಈರುಳ್ಳಿ ಬೆಳೆ ಬೆಳೆಯಲಾಗಿದೆ. ಈರುಳ್ಳಿ ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಕ್ರಿಯೆಗಳೂ ಚುರುಕುಗೊಂಡಿವೆ ಎಂದು ಸಚಿವರು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here