ಪದವಿ ಪ್ರದಾನ ಸಮಾರಂಭ

0
179

ವರದಿ: ಸುನೀಲ್ ಬೇಕಲ್
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದಿಂದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಸಂಶೋಧನಾತ್ಮಕ ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಪಾರಂಪರಿಕ ಚಿಕಿತ್ಸಾ ಪದ್ಧತಿಯನ್ನು ಜನಪ್ರಿಯಗೊಳಿಸಲು ಆನೇಕ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಕಾರ್ಯದರ್ಶಿ ಅಜಿತ್ ಎಂ. ಶರಣ್ ಹೇಳಿದರು.
 
ujire_-padvai-pradana
ಉಜಿರೆಯಲ್ಲಿ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಇಪ್ಪತ್ತಮೂರನೆ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಶುಭಾಶಂಸನೆ ಮಾಡಿ ಮಾತನಾಡಿದರು.
 
ದೇಹ ಮತ್ತು ಮನಸ್ಸಿನ ಆರೋಗ್ಯ ರಕ್ಷಣೆಯೊಂದಿಗೆ ಆಧ್ಯಾತ್ಮಿಕ ಹಿನ್ನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಪದ್ಧತಿಯು ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರಕೃತಿ ಚಿಕಿತ್ಸಾ ಪದ್ಧತಿಯ ಪದವೀಧರರು ನೋಂದಾವಣೆ ಮಾಡಿ ಮಾನ್ಯತೆ ಪಡೆಯಲು ದೆಹಲಿಯಲ್ಲಿ ಆಯುಷ್ ಮಂತ್ರಾಲಯದ ವತಿಯಿಂದ ಪ್ರತ್ಯೇಕ ವಿಭಾಗ ಪ್ರಾರಂಭಿಸಲಾಗುವುದು ಎಂದು ಅವರು ಪ್ರಕಟಿಸಿದರು.
 
ಆರು ಸಂಶೋಧನಾ ಕೇಂದ್ರಗಳನ್ನು ಪ್ರಾರಂಭಿಸಲು ಉದ್ದೇಶಿಸಿದ್ದು ಕರ್ನಾಟಕ ನಾಗಮಂಗಲದಲ್ಲಿ ಈಗಾಗಲೇ ಕೆಲಸ ಪ್ರಾರಂಭಿಸಲಾಗಿದೆ. ಪೂನಾದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಅಭಿವೃದ್ಧಿ ಪಡಿಸಲಾಗುವುದು. ಇನ್ನೂರು ಮಂದಿಗೆ ಸಂಶೋಧನಾ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು.
 
ಪ್ರಕೃತಿ ಚಿಕಿತ್ಸಾ ವೈದ್ಯರು ಕುತೂಹಲದಿಂದ ನಿರಂತರ ಕಲಿಕೆಯೊಂದಿಗೆ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಉಜಿರೆಯಲ್ಲಿರುವ ಪ್ರಕೃತಿ ಚಿಕಿತ್ಸಾ ಕಾಲೇಜು ಮತ್ತು ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ದೇಶದಲ್ಲೇ ಉತ್ತಮ ಸಂಸ್ಥೆಯಾಗಿದ್ದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಹೇಳಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದರು.
 
ಆಯುಷ್ ಮಂತ್ರಾಲಯದ ನಿರ್ದೇಶಕ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ಈಶ್ವರ್ ಯನ್. ಆಚಾರ್ಯ ನೂತನ ಪದವೀಧರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
 
ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಮಾತನಾಡಿ, ಪಾಶ್ರ್ವ ಪರಿಣಾಮರಹಿತವಾದ ಪ್ರಕೃತಿ ಚಿಕಿತ್ಸಾ ವಿಧಾನವು ಎಲ್ಲಾ ರೋಗಗಳ ಶಮನಕ್ಕೆ ರಾಮಬಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
 
 
ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ, ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಡಾ. ಶಿವಪ್ರಸಾದ ಶೆಟ್ಟಿ ಧನ್ಯವಾದವಿತ್ತರು. ಡಾ. ಚಂದ್ರಕಾಂತ್ ಮತ್ತು ಡಾ. ಜೋತ್ಸ್ನಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here