ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ ಕಲ್ಪಿಸಬೇಕು: ಸಿಎಂ

0
479

ವರದಿ: ಲೇಖಾ
ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರಿಗೂ ಸಹ ಶೇ 50 ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ವಾಟಿಸಿ ಮಾತನಾಡಿದರು. ಸಮಾಜದಲ್ಲಿ ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಸಹ ಇರಬೇಕು. ಸ್ಥಳೀಯ ಸಂಸ್ಥೆಗಳ ರೀತಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲೂ ಸಹ ಮೀಸಲಾತಿಯನ್ನು ಜಾರಿಗೊಳಿಸುವಂತಾಗಬೇಕೆಂದು ತಿಳಿಸಿದರು.
 
 
ರಾಜ್ಯದಲ್ಲಿ ಜಾತಿ ಸಮೀಕ್ಷೆ ಕಾರ್ಯವು ಪ್ರಗತಿಯಲ್ಲಿದ್ದು, ಸದ್ಯದಲ್ಲೇ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದ ಮುಖ್ಯಮಂತ್ರಿಗಳು ಸರ್ವರಿಗೂ ಸಮಾನತೆಯನ್ನು ತರಲು ಸಮೀಕ್ಷೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ಹೊಸ ಮೀಸಲಾತಿ ನೀತಿಯನ್ನು ತರುವಲ್ಲಿ ಸಹಾಯವಾಗುತ್ತದೆ ಎಂದರು. ಇಂತಹ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಗಣ್ಯರು ಮಂಡಿಸುವ ವಾದಗಳನ್ನು ಸಹ ಪರಿಗಣಿಸಲಾಗುವುದು. ಜಾತಿ ಸಮೀಕ್ಷೆ ವರದಿಯನ್ನು ಸಾರ್ವಜನಿಕರ ಅಭಿಪ್ರಾಯ ಪಡೆದು ಸಮಾಜ ಏಳಿಗ್ಗೆಗಾಗಿ ಹೊಸ ನೀತಿಯನ್ನು ಜಾರಿಗೆ ತರಬಹುದಾಗಿದೆ ಎಂದರು.
 
 
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್. ಕಾಂತರಾಜ ಮಾತನಾಡಿ ಇಂದಿನ ವಿಚಾರ ಸಂಕಿರಣದಲ್ಲಿ ದೇಶದ ನಾನಾ ಭಾಗದ ಗಣ್ಯರು ಪಾಲ್ಗೊಂಡಿದ್ದು, ಅವರು ಮಂಡಿಸುವ ವಿಷಯಗಳನ್ನು ಆಯೋಗವು ಪರಿಗಣನೆಗೆ ತೆಗೆದುಕೊಳ್ಳಲಿದೆ. ಆಯೋಗವು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾತಿ ಸಮೀಕ್ಷೆಯ ವರದಿ ಸಂಪೂರ್ಣಗೊಂಡ ನಂತರ ತನ್ನ ಅಭಿಪ್ರಾಯವನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದರು.
 
 
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ ವಿಚಾರ ಸಂಕಿರಣದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವುದೇ ಸರ್ಕಾರದ ಮುಖ್ಯಗುರಿ. ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಲೊಕೋಪಯೋಗಿ ಇಲಾಖೆಯ ಕಾಮಗಾರಿಗಳಲ್ಲಿ ಮೀಸಲಾತಿಯನ್ನು ತರುವಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಸೇರಿದಂತೆ ಇನ್ನಿತರರು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here