ಮೌಲ್ಯಾಧಾರಿತ ಶಿಕ್ಷಣದಿಂದ ಸುಸಂಸ್ಕೃತ ಸಮಾಜ ನಿರ್ಮಾಣ

0
525

ವರದಿ: ಸುನೀಲ್ ಬೇಕಲ್
ಮೌಲ್ಯಾಧಾರಿತ ಶಿಕ್ಷಣದಿಂದ ಸಭ್ಯ, ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಡಾ. ಕೆ. ಭೈರಪ್ಪ ಹೇಳಿದರು.
ujire-hegde-talk
 
ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ಹಾಗೂ ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
 
 
 
ಶಿಕ್ಷಣದ ಜೊತೆಗೆ ನೈತಿಕತೆ, ಜೀವನ ಕೌಶಲ ಹಾಗೂ ಮಾನವೀಯ ಮೌಲ್ಯಗಳನ್ನು ಬೋಧಿಸಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗುವುದರಿಂದ ಮೌಲ್ಯಧಾರಿತ ಶಿಕ್ಷಣ ಹಾಗೂ ನೈತಿಕ ಶಿಕ್ಷಣದಿಂದ ಸುಂದರ ಸಮಾಜವನ್ನು ರೂಪಿಸಬಹುದು. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯ ಹೊಂದಬಹುದು. ಈ ದಿಸೆಯಲ್ಲಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಕೊಡುಗೆ ಅಮೂಲ್ಯವಾಗಿದೆ ಎಂದು ಅವರು ಶ್ಲಾಘಿಸಿದರು.
 
ujire_paint
 
ಪತ್ರಕರ್ತ ಕೆ. ಶಿವಕುಮಾರ್ ಶುಭಾಶಂಸನೆ ಮಾಡಿದರು. ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲರ ಕುಂಚದ ಕಲೆ ಹಾಗೂ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿನಿಯರ ಗಾಯನ ಕಣ್ಮನ ಸೆಳೆಯಿತು.
 
 
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವಿರುವ ಪ್ರಪಂಚವನ್ನು ಚೆನ್ನಾಗಿ ರಕ್ಷಣೆ ಮಾಡಿ ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ ಬಿಟ್ಟುಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರಕೃತಿ-ಪರಿಸರ ಸಂರಕ್ಷಣೆ ಮಾಡಬೇಕು. ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಮಾಡಬಾರದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
 
ಶಶಿಕಾಂತ ಜೈನ್ ಸ್ವಾಗತಿಸಿದರು. ಅಶೋಕ ಪೂಜಾರಿ ಧನ್ಯವಾದವಿತ್ತರು. ಮಂಜುನಾಥ್ ಎಂ. ಎನ್. ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here